ಹೊಸ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅಧಿಕಾರ ವಹಿಸಿಕೊಂಡಿದ್ದು, ಅಧಿಕಾರಾಕಾಂಕ್ಷಿಗಳಿಗೆ ಸ್ಪಷ್ಟ ಸಂದೇಶ ನೀಡಿದ್ದಾರೆ. ಪಕ್ಷ ಸಂಘಟನೆಗೆ ಒತ್ತು ನೀಡುವಂತೆ ಮನವಿ ಮಾಡಿರುವ ಹರಿಪ್ರಸಾದ್, ರಾಹುಲ್ ಗಾಂಧಿ ಹೋರಾಟಕ್ಕೆ ಬೆಂಬಲ ನೀಡುವಂತೆ ಕರೆ ನೀಡಿದ್ದಾರೆ. ಇದು ಕೇವಲ ಹುದ್ದೆಯಲ್ಲ, ಸಾಮಾಜಿಕ ನ್ಯಾಯ, ಜಾತ್ಯತೀತತೆ ಮತ್ತು ದುರ್ಬಲ ವರ್ಗಗಳ ಸಬಲೀಕರಣದ ಜಯ ಎಂದು ಬಣ್ಣಿಸಿದ್ದಾರೆ. ಸಿದ್ಧಾಂತಕ್ಕೆ, ಜನರ ಹಿತಕ್ಕೆ ಆದ್ಯತೆ ನೀಡುವ ಮೂಲಕ ಪಕ್ಷವನ್ನು ಬಲಪಡಿಸಲು ಶ್ರಮಿಸುವುದಾಗಿ ತಿಳಿಸಿದ್ದಾರೆ.
ಬೆಂಗಳೂರು, ಜೂ.4: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಪಕ್ಷದ ಸಚಿವ ಸ್ಥಾನ ವಂಚಿತರಿಗೆ ಹಾಗೂ ಅಧಿಕಾರ ಆಸೆ ಉಳ್ಳವರಿಗೆ ಅತ್ಯಂತ ಖಡಕ್ ಸಂದೇಶ ರವಾನಿಸಿದ್ದಾರೆ. “ಯಾರಿಗೆ ಅಧಿಕಾರ ಮತ್ತು ಸ್ಥಾನಮಾನ ಬೇಕೋ ಅವರು ಡಿ.ಕೆ. ಶಿವಕುಮಾರ್ ಜೊತೆಗೆ ಹೋಗಿ, ಪಕ್ಷವನ್ನು ಸದೃಢವಾಗಿ ಬೆಳೆಸಬೇಕು ಅನ್ನೋರು ನಮ್ಮ ಜೊತೆಗೆ ಬನ್ನಿ” ಎಂದು ಹೇಳುವ ಮೂಲಕ ಕಾಂಗ್ರೆಸ್ ನಾಯಕರಿಗೆ ಹಾಗೂ ಸಚಿವ ಆಕ್ಷಾಂಕಿಗಳಿಗೆ ಖಡಕ್ ಮಾತುಗಳನ್ನು ಹೇಳಿದ್ದಾರೆ. ಈ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಬಿ.ಕೆ. ಹರಿಪ್ರಸಾದ್, ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ನಾಯಕರಿಗೆ ಕಳಕಳಿಯ ವಿನಂತಿ ಮಾಡಿದರು. “ಸರ್ಕಾರದಲ್ಲಿ ಈಗಾಗಲೇ ಬೇರೆ ಬೇರೆ ಕೆಲಸ ಮಾಡಿದವರು ಈಗ ಪಕ್ಷದ ಸಂಘಟನೆಗೆ ಒತ್ತು ನೀಡಬೇಕು. ನಾವೆಲ್ಲರೂ ಸೇರಿ ರಾಹುಲ್ ಗಾಂಧಿ ಅವರ ಹೋರಾಟಕ್ಕೆ ಶಕ್ತಿ ತುಂಬುವ ಕೆಲಸ ಮಾಡಬೇಕಿದೆ. ಸಂಘಟನೆ ಮತ್ತು ಸರ್ಕಾರ ಎರಡನ್ನೂ ಸಮತೋಲನವಾಗಿ ಹಂಚಿಕೊಂಡು ಮುಂದೆ ಹೋಗೋಣ. ನನ್ನ ಪೂರ್ವಜರು ಮಾಡಿದ ಪುಣ್ಯದಿಂದಾಗಿ ಈ ಪವಿತ್ರ ಪಕ್ಷದ ಅಧ್ಯಕ್ಷ ಹುದ್ದೆ ನನಗೆ ಸಿಕ್ಕಿದೆ. ಸಾಮಾನ್ಯ ಕಾರ್ಯಕರ್ತರಿಗೆ ಏನೇ ತೊಂದರೆಯಾದರೂ ನಾನು ಸದಾ ಅವರ ಜೊತೆ ಇರುತ್ತೇನೆ” ಎಂದು ಭರವಸೆ ನೀಡಿದರು.
ಕೆಪಿಸಿಸಿ ಅಧ್ಯಕ್ಷರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಎಐಸಿಸಿ (AICC) ಹೈಕಮಾಂಡ್ ನಾಯಕರಿಗೆ ಧನ್ಯವಾದ ತಿಳಿಸಿ ಬಿ.ಕೆ. ಹರಿಪ್ರಸಾದ್ ಅವರು ಸುದೀರ್ಘ ಪೋಸ್ಟ್ ಹಂಚಿಕೊಂಡಿದ್ದಾರೆ. “ಹೈಕಮಾಂಡ್ನ ಈ ನಿರ್ಧಾರ ಕೇವಲ ಒಬ್ಬ ವ್ಯಕ್ತಿಗೆ ನೀಡಿರುವ ಹುದ್ದೆಯಲ್ಲ. ಇದು ಕಾಂಗ್ರೆಸ್ ಪಕ್ಷದ ಮೂಲ ಸಿದ್ಧಾಂತಗಳಾದ ಸಾಮಾಜಿಕ ನ್ಯಾಯ, ಜಾತ್ಯತೀತತೆ, ಪ್ರಜಾಪ್ರಭುತ್ವ ಮತ್ತು ದುರ್ಬಲ ವರ್ಗಗಳ ಸಬಲೀಕರಣಕ್ಕೆ ಸಂದ ಜಯ. ನನ್ನ ಜೀವನ ಪೂರ್ತಿ ಕಾಂಗ್ರೆಸ್ ತತ್ವಗಳಿಗಾಗಿ ಮೀಸಲಿಟ್ಟಿದ್ದೇನೆ. ನನಗೆ ಅಧಿಕಾರಕ್ಕಿಂತ ಸಿದ್ಧಾಂತ ದೊಡ್ಡದು, ಹುದ್ದೆಗಿಂತ ಜನರ ಹಿತ ಮುಖ್ಯ” ಎಂದು ಬರೆದುಕೊಂಡಿದ್ದಾರೆ.





