ಬಂಟ್ವಾಳ, ಆ. 9: ಶಾಲಾ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಬಂಟ್ವಾಳ ಸಂಚಾರ ಪೊಲೀಸರು ನಡೆಸಿದ ವಿಶೇಷ ತಪಾಸಣಾ ಕಾರ್ಯಾಚರಣೆಯಲ್ಲಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವಾಹನಗಳ ವಿರುದ್ಧ ಒಟ್ಟು 13 ಪ್ರಕರಣಗಳನ್ನು ದಾಖಲಿಸಲಾಗಿದೆ.


ಬಂಟ್ವಾಳ ಟ್ರಾಫಿಕ್ ಎಸ್ಐ ಆದರ್ಶ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ, ನಿಗದಿತ ಮಿತಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ಮಕ್ಕಳನ್ನು ವಾಹನಗಳಲ್ಲಿ ಕರೆದೊಯ್ಯುತ್ತಿದ್ದ ಪ್ರಕರಣಗಳಿಗೆ ಹೆಚ್ಚಿನ ಆದ್ಯತೆ ನೀಡಿ ತಪಾಸಣೆ ನಡೆಸಲಾಯಿತು. ಈ ವೇಳೆ ಅನುಮತಿಸಲಾದ ಸಂಖ್ಯೆಗಿಂತ ಹೆಚ್ಚುವರಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ 8 ವಾಹನಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇದರ ಜೊತೆಗೆ ಶಾಲಾ ವಾಹನಗಳಿಗೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳನ್ನು ಹೊಂದಿರದಿರುವುದು ಹಾಗೂ ದಾಖಲೆಗಳಲ್ಲಿ ನಿಯಮ ಉಲ್ಲಂಘನೆ ಕಂಡುಬಂದ ಹಿನ್ನೆಲೆಯಲ್ಲಿ 5 ಪ್ರಕರಣಗಳನ್ನು ದಾಖಲಿಸಲಾಗಿದೆ. ಶಾಲಾ ವಾಹನಗಳಲ್ಲಿ ಮಕ್ಕಳನ್ನು ಸುರಕ್ಷಿತವಾಗಿ ಸಾಗಿಸುವುದು ವಾಹನ ಮಾಲೀಕರು ಹಾಗೂ ಚಾಲಕರ ಪ್ರಮುಖ ಜವಾಬ್ದಾರಿಯಾಗಿದೆ. ಸಾಮರ್ಥ್ಯಕ್ಕಿಂತ ಹೆಚ್ಚಿನ ಮಕ್ಕಳನ್ನು ವಾಹನದಲ್ಲಿ ಕರೆದೊಯ್ಯುವುದರಿಂದ ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಗಂಭೀರ ಅಪಾಯ ಉಂಟಾಗುವ ಸಾಧ್ಯತೆ ಇರುವುದರಿಂದ, ಇಂತಹ ನಿಯಮ ಉಲ್ಲಂಘನೆಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಸಂಚಾರ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.



