ಆರೋಗ್ಯಕರ ಬದುಕಿಗೆ ಸೈಕಲ್ ಬಳಕೆ ಸಹಾಯಕಾರ-ಡಾ.ರಂಗನಾಥ್

 

ಚಿತ್ರದುರ್ಗ(ಕರ್ನಾಟಕ ವಾರ್ತೆ)ಫೆ.16:
ದೈಹಿಕವಾಗಿ ಸದೃಢರಾಗಿರಲು ನಿರಂತರವಾಗಿ ಸೈಕಲ್ ಬಳಕೆ, ವ್ಯಾಯಾಮದಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ರಂಗನಾಥ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎನ್.ಸಿ.ಡಿ. ಕೋಶ, ಜಿಲ್ಲಾ ಸರ್ವೇಕ್ಷಣಾ ಘಟಕದ ಆಶ್ರಯದಲ್ಲಿ ಚಿತ್ರದುರ್ಗ ತಾಲೂಕಿನ ಬಸವನಶಿವನಕೆರೆ ಗ್ರಾಮದ ಪ್ರೌಢಶಾಲೆ ಆವರಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ಆರೋಗ್ಯಕ್ಕಾಗಿ ಸೈಕಲ್ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.
ಜಂತುಹುಳ ನಿವಾರಣೆ,  ಕ್ಯಾನ್ಸರ್ ಸೇರಿದಂತೆ ಇತರೆ ಹೃದಯ ಸಂಬಂಧಿ ಕಾಯಿಲೆಗಳು, ಮಧುಮೇಹ, ರಕ್ತದೊತ್ತಡದಂತಹ ಅಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ, ಸಾರ್ವಜನಿಕರಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ಸಾಕಷ್ಟು ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ. ಸಾರ್ವಜನಿಕರು ಇಲಾಖೆ ಜತೆ ಕೈಜೋಡಿಸಿ ಆರೋಗ್ಯಪೂರ್ಣ ಬದುಕು ಸಾಗಿಸುವ ಮೂಲಕ ಸ್ವಾಸ್ಥ್ಯ ಸಮಾಜ ನಿರ್ಮಿಸುವಲ್ಲಿ ಸಹಕರಿಸಬೇಕು ಎಂದರು.
ರೋಗ ಬಂದ ಮೇಲೆ ಚಿಕಿತ್ಸೆ ಪಡೆಯುವುದಕ್ಕಿಂತ ರೋಗ ಬಾರದಂತೆ ನೋಡಿಕೊಳ್ಳುವುದು ಒಳ್ಳೆಯದು. ಇತ್ತೀಚಿನ ವರ್ಷಗಳಲ್ಲಿ ಬಾಯಿ, ಗರ್ಭಗೋಶ, ಸ್ತನ ಕ್ಯಾನ್ಸರ್ ಸೇರಿದಂತೆ ಮತ್ತಿತರ ಕಾಯಿಲೆಗಳು ಜನರಲ್ಲಿ ಬಾಧಿಸುತ್ತಿವೆ. ಈ ಬಗ್ಗೆ ಸಾರ್ವಜನಿಕರು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ಸಲಹೆ ನೀಡಿದರು.
ಜಾಥಾಧಲ್ಲಿ ಸ್ವಸ್ಥ ಮನ, ಸ್ವಸ್ಥ ಮನೆ ಎಂಬ ಘೋಷವಾಕ್ಯದೊಂದಿಗೆ ಭೌತಿಕ, ಮಾನಸಿಕ ಕ್ಷೇಮಕ್ಕಾಗಿ ಪರಿಸರಸ್ನೇಹಿ ವಾತಾವರಣವನ್ನು ಸೃಷ್ಠಿಸೋಣ, ನಮ್ಮ ಆರೋಗ್ಯ ನಮ್ಮ ಕೈಯಲ್ಲಿ, ನಮ್ಮ ಸ್ವಚ್ಚತೆಯೇ ನಮ್ಮ ಆರೋಗ್ಯ, ಧೂಮಪಾನ ಆರೋಗ್ಯಕ್ಕೆ ಹಾನಿಕಾರ, ಆರೋಗ್ಯವೇ ಭಾಗ್ಯ ಎಂಬ ನಾಮ ಫಲಕಗಳನ್ನು ಹಿಡಿದು ವಿದ್ಯಾರ್ಥಿಗಳು ಘೋಷಣೆಗಳನ್ನು ಮೊಳಗಿಸಿದರು. ಇದೇ ಸಂದರ್ಭದಲ್ಲಿ ಗ್ರಾಮಸ್ಥರ 150ಕ್ಕೂ ಹೆಚ್ಚು ಮಂದಿಗೆ ಮಧುಮೇಹ, ರಕ್ತದೊತ್ತಡ ಪರೀಕ್ಷೆ ನಡೆಸಲಾಯಿತು.
ಬ್ಯಾಲಹಾಳ್ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮಿದೇವಿ, ಸದಸ್ಯ ಪಿ.ಬಿ.ಚಂದ್ರಪ್ಪ, ಪ್ರಭಾರ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕಾಶಿ, ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ, ಸಮುದಾಯ ಆರೋಗ್ಯಾಧಿಕಾರಿ ದಿನೇಶ್, ಆರೋಗ್ಯ ನೀರಿಕ್ಷಣಾಧಿಕಾರಿಗಳಾದ ಶ್ರೀಧರ್, ರೇಣುಕಾಸ್ವಾಮಿ, ಮಂಜುನಾಥ್, ರಂಗಾರೆಡ್ಡಿ, ಆರೋಗ್ಯ ಸುರಕ್ಷತಾಧಿಕಾರಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಬಸವನಶಿವನಕೆರೆ ಪ್ರೌಢಶಾಲೆಯ ಮುಖ್ಯಶಿಕ್ಷಕರು, ಸಹ ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

[t4b-ticker]

You May Also Like

More From Author

+ There are no comments

Add yours