ಮತದಾನ ಜಾಗೃತಿ: ಬೃಹತ್ ಬೈಕ್ ರ್ಯಾಲಿಗೆ ಚಾಲನೆ

 

ಚಿತ್ರದುರ್ಗ(ಕರ್ನಾಟಕ ವಾರ್ತೆ)ಏ.20:
ಮತದಾನ ಜಾಗೃತಿಗಾಗಿ ಜಿಲ್ಲಾ ಪಂಚಾಯಿತಿ ಕಚೇರಿ ಮುಂಭಾಗದಲ್ಲಿ ಆರಂಭಗೊಂಡ ಬೃಹತ್ ಬೈಕ್ ರ್ಯಾಲಿ ಕಾರ್ಯಕ್ರಮಕ್ಕೆ ಗುರುವಾರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ, ಜಿಲ್ಲಾ ಪಂಚಾಯಿತಿ ಸಿಇಒ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಎಂ.ಎಸ್.ದಿವಾಕರ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಸ್ವೀಪ್ ಸಮಿತಿ ಸಹಯೋಗದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ-2023ರ ಹಿನ್ನಲೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಮತ್ತು ತಾಲ್ಲೂಕು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು ಸೇರಿದಂತೆ ನೂರಾರು ನೌಕರರು ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡು ಮತದಾನದ ಕುರಿತು ಅರಿವು ಮೂಡಿಸಿದರು.
ಬೈಕ್ ರ್ಯಾಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಚಿತ್ರದುರ್ಗ ತಾಲ್ಲೂಕು ಸ್ವೀಪ್ ಅಧ್ಯಕ್ಷ ಹೆಚ್.ಹನುಮಂತಪ್ಪ, ರಾಜ್ಯ ಚುನಾವಣಾ ಆಯೋಗದ ಸೂಚನೆಯಂತೆ ಕಳೆದ ಬಾರಿ ಕಡಿಮೆ ಮತದಾನವಾಗಿರುವ ನಗರ ವ್ಯಾಪ್ತಿಯಲ್ಲಿ ವಿಭಿನ್ನ ರೀತಿಯ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಮತದಾನ ಪ್ರಮಾಣ ಹೆಚ್ಚಳ ಮಾಡುವ ಉದ್ದೇಶದಿಂದ ಮತದಾರರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಮೇ 10 ರಂದು ಮತದಾನ ನಡೆಯಲಿದ್ದು, ಎಲ್ಲ ಮತದಾರರು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ತಮ್ಮ ಹಕ್ಕು ಚಲಾಯಿಸಬೇಕು ಎಂದರು.
ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಪಿ.ಟಿ.ಧನಂಜಯ ಮಾತನಾಡಿ, ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ತಾಲ್ಲೂಕು ಸ್ವೀಪ್ ಸಮಿತಿ ಅಧ್ಯಕ್ಷರ ನಿರ್ದೇಶನದ ಮೇರೆಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಹಳ್ಳಿಗಳಿಗೂ ಕಸ ಸಂಗ್ರಹ ವಾಹನಗಳ ಮೂಲಕ ಯುವ ಮತದಾರರು, ಮಹಿಳಾ ಮತದಾರರ, ದುರ್ಬಲ ವರ್ಗದ ಮತದಾರರು ಸೇರಿದಂತೆ ಎಲ್ಲ ವರ್ಗದ ಮತದಾರರನ್ನು ಸೆಳೆಯುವ ವಿಶೇಷ ಹಾಡುಗಳ ಮೂಲಕ ಮತದಾನದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಜೊತೆಗೆ ಪಿಡಿಒ ಹಾಗೂ ಸಿಬ್ಬಂದಿ ಪ್ರತಿನಿತ್ಯವೂ ಬೀದಿನಾಟಕ, ಜಾಥಾ ಸೇರಿದಂತೆ ಒಂದಿಲ್ಲೊಂದು ಸ್ವೀಪ್ ಚಟುವಟಿಕೆ ಕಾರ್ಯಕ್ರಮ ಆಯೋಜನೆ ಮಾಡಿ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಕಳೆದ ಬಾರಿಯ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ ಪ್ರದೇಶಗಳ ಪ್ರತಿ ಮನೆಗೆ ಭೇಟಿ ನೀಡಿ ಆಮಂತ್ರಣ ನೀಡುವ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡು ಮತದಾನ ಪ್ರಮಾಣ ಹೆಚ್ಚಳ ಹಾಗೂ ಕಡ್ಡಾಯ ಮತದಾನಕ್ಕೆ ಪ್ರೇರೇಪಿಸಲಾಗುವುದು ಎಂದು ಹೇಳಿದರು.
ಮತದಾನ ಜಾಗೃತಿ ಅಂಗವಾಗಿ ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಮುಂಭಾಗದಿಂದ ಆರಂಭವಾದ ಬೃಹತ್ ಬೈಕ್ ರ್ಯಾಲಿ ಕಾರ್ಯಕ್ರಮವು  ನಗರದ ಬಿ.ಡಿ.ರಸ್ತೆ, ಗಾಂಧಿ ವೃತ್ತ, ಸಂಗೋಳ್ಳಿ ರಾಯಣ್ಣ ವೃತ್ತ, ಕನಕ ಸರ್ಕಲ್ ತದನಂತರ ಜಿಲ್ಲಾಧಿಕಾರಿ ವೃತ್ತದವರೆಗೂ ಮುಖ್ಯ ರಸ್ತೆಗಳಲ್ಲಿ ಸಂಚರಿಸಿ, ಮತದಾನ ಜಾಗೃತಿ ಗೀತೆಗಳ ಮೂಲಕ ಮತದಾನದ ಮಹತ್ವ ಸಾರಿದರು. ನಂತರ ಜಿಲ್ಲಾಧಿಕಾರಿ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಜ್ಞಾವಿಧಿ ಬೋಧಿಸಲಾಯಿತು.
ಬೈಕ್ ರ್ಯಾಲಿ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಗಾಯತ್ರಿ, ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ತಾಲ್ಲೂಕು ಸ್ವೀಪ್ ಸಮಿತಿ ಕಾರ್ಯದರ್ಶಿ ಹೆಚ್. ಗಿರಿಜಾ, ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಮುರುಗೇಶ್, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕರಾದ ಪಿ.ಟಿ.ಧನಂಜಯ, ಚೈತ್ರಾ ಸೇರಿದಂತೆ ಚಿತ್ರದುರ್ಗ ತಾಲ್ಲೂಕಿನ 38 ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಹಾಗೂ ತಾಲ್ಲೂಕು ಪಂಚಾಯಿತಿ ಸಿಬ್ಬಂದಿ ವರ್ಗ, ನರೇಗಾ ತಾಂತ್ರಿಕ ಸಹಾಯಕರು, ಗ್ರಾಮ ಪಂಚಾಯಿತಿ ನೀರಗಂಟಿಗಳು ಹಾಜರಿದ್ದರು.
[t4b-ticker]

You May Also Like

More From Author

+ There are no comments

Add yours