ಕರ್ನಾಟಕದಲ್ಲಿ ಮುಂಗಾರು ಆರಂಭದಲ್ಲೇ ಕೈಕೊಟ್ಟಿದೆ. ಬರಗಾಲ ಪರಿಸ್ಥಿತಿ ಕಾಡುತ್ತಿರುವ ಮಧ್ಯೆ ಹವಾಮಾನ ಇಲಾಖೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ ಐದು ದಿನ ಮಳೆ ಆಗಲಿದೆ ಎಂದು ಮುನ್ಸೂಚನೆ ನೀಡಿದೆ. ಹಾಗಾದ್ರೆ, ಮಳೆ ಎಲ್ಲೆಲ್ಲಿ ಆಗಲಿದೆ ಎನ್ನುವ ಡಿಟೇಲ್ಸ್ ಇಲ್ಲಿದೆ.

ಕಳೆದ ಕೆಲ ದಿನಗಳಿಂದ ಕರ್ನಾಟಕದಲ್ಲಿ ಕೈಕೊಟ್ಟಿದ್ದ ವರುಣ ಶನಿವಾರ ಹಲವೆಡೆ ತಂಪೆರೆದಿದೆ. ಹೌದು.. ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣನ ಸಿಂಚನವಾಗಿದ್ದು, ಮುಂದಿನ ಐದು ದಿನಗಳ (ಜುಲೈ 19ದಿಂದ ಜು.23) ಕಾಲ ರಾಜ್ಯಾದ್ಯಂತ ಅಲ್ಲಲ್ಲಿ ಜೋರಾದ ಗಾಳಿ, ಗುಡುಗು, ಸಿಡಿಲು ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ. ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡಿನ ಹಲವು ಕಡೆಗಳಲ್ಲಿ ಮುಂದಿನ ಎರಡು ದಿನಗಳು ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಕರಾವಳಿ ಮತ್ತು ಮಲೆನಾಡು ಭಾಗಕ್ಕೆ ಆರೆಂಜ್ ಅಲರ್ಟ್
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗ ಹೆಚ್ಚಾಗಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಇನ್ನು ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.



