ಬೆಂಗಳೂರು, ಡಿ. 7: ನಾಳೆಯಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ವಿಧಾನಮಂಡಲ ಅಧಿವೇಶನ ಹಿನ್ನಲೆ ಕುಂದಾನಗರಿ ಸಕಲ ರೀತಿಯಲ್ಲಿ ಸಜ್ಜಾಗಿದೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು, ಶಾಸಕರು ಸೇರಿದಂತೆ ಸಚಿವಾಲಯದ ಅಧಿಕಾರಿಗಳು, ಸಿಬ್ಬಂದಿಗೆ ಊಟ, ವಸತಿ ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾಡಳಿತದಿಂದ ಈಗಾಗಲೇ 3 ಸಾವಿರ ರೂಮ್ ಬುಕ್ ಆಗಿದ್ದು, ಸಿಎಂ ಮತ್ತು ಡಿಸಿಎಂಗೆ ಅತಿಥಿ ಗೃಹದಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದೆ.
ಚಳಿಗಾಲದ ಅಧಿವೇಶನ ಹಿನ್ನೆಲೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಈ ಬಾರಿ ಬೆಳಗಾವಿ ನಗರದಲ್ಲಿ ಹೆಚ್ಚುವರಿ ಭದ್ರತೆ ನಿಯೋಜನೆ ಮಾಡಲಾಗಿದೆ. ದೆಹಲಿಯಲ್ಲಿ ಉಗ್ರರಿಂದ ಕಾರು ಸ್ಫೋಟ ಪ್ರಕರಣ ಹಿನ್ನೆಲೆ ಅಧಿವೇಶನದ ವೇಳೆ ಎಚ್ಚರವಹಿಸುವಂತೆ ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ನೀಡಿರುವ ಕಾರಣ ಬೆಳಗಾವಿ ಸುವರ್ಣಸೌಧದ ಸುತ್ತಮುತ್ತ ಹೈಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ ನಗರದಲ್ಲಿ ಹೆಚ್ಚುವರಿಯಾಗಿ 6 ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿದ್ದು, ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ನೇತೃತ್ವದಲ್ಲಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಆರು ಎಸ್ಪಿ ಱಂಕ್ ಮಟ್ಟದ ಪೊಲೀಸ್ ಅಧಿಕಾರಿಳು, 146 ಹಿರಿಯ ಪೊಲೀಸ್ ಅಧಿಕಾರಿಗಳು, 3,820 ಪೊಲೀಸ್ ಸಿಬ್ಬಂದಿ, 500 ಹೋಂ ಗಾರ್ಡ್ಸ್, 8 ಕ್ಷಿಪ್ರ ಕಾರ್ಯಪಡೆ, 10 ಡಿಎಆರ್ ತುಕಡಿ, 35 ಕೆಎಸ್ಆರ್ಪಿ ತುಕಡಿ, 1 ಬಿಡಿಡಿಎಸ್ ತಂಡ, 1 ಗರುಡಾ ಫೋರ್ಸ್, 16 ವಿಧ್ವಂಸಕ ಕೃತ್ಯ ತಪಾಸಣೆ ತಂಡಗಳು ಭದ್ರತೆಗಾಗಿ ನಿಯೋಜನೆಗೊಂಡಿವೆ.






