ಜೂನ್ 12ರಂದು ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನ: ಅರ್ಥಪೂರ್ಣ ಆಚರಣೆಗೆ ಡಿಸಿ ಸೂಚನೆ

 

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್5:
ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಇದೇ ಜೂನ್ 12ರಂದು ವಿಶ್ವ ಬಾಲಕಾರ್ಮಿಕ ವಿರೋಧಿ ದಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನ ಕಾರ್ಯಕ್ರಮವನ್ನು ವಿವಿಧ ಇಲಾಖೆಯ ಸಹಯೋಗದೊಂದಿಗೆ ಅರ್ಥಪೂರ್ಣವಾಗಿ ಆಚರಣೆ ಮಾಡಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಣೆ ಮಾಡುವ ಬಗ್ಗೆ ಜಿಲ್ಲಾಮಟ್ಟದ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶಿಷ್ಠಾಚಾರ ಅನುಸಾರ ಜನಪ್ರತಿನಿಧಿಗಳನ್ನು ಆಹ್ವಾನಿಸಿ, ಕಾರ್ಯಕ್ರಮ ಆಯೋಜನೆ ಮಾಡಿ ಯಶಸ್ವಿಗೊಳಿಸಬೇಕು ಎಂದರು.
ಜೂನ್ 12ರಂದು ಬೆಳಿಗ್ಗೆ 11ಕ್ಕೆ ಎಲ್ಲಾ ಸರ್ಕಾರಿ ನೌಕರರು ಕೆಲಸ ನಿರ್ವಹಿಸುತ್ತಿರುವ ಸ್ಥಳಗಳಲ್ಲಿಯೇ ಒಟ್ಟಾಗಿ ಸೇರಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನ-2023ರ ಅಂಗವಾಗಿ “ಪ್ರಮಾಣ ವಚನ” ಸ್ವೀಕರಿಸುವಂತೆ ಕ್ರಮವಹಿಸಬೇಕು. ಪ್ರತಿಯೊಬ್ಬ ಸರ್ಕಾರಿ ನೌಕರರಿಂದ ಬಾಲ ಕಾರ್ಮಿಕರನ್ನು ಮನೆಗಳಲ್ಲಾಗಲಿ ಅಥವಾ ಅವರ ಸಂಸ್ಥೆಗಳಲ್ಲಾಗಲಿ ನೇಮಿಸಿಕೊಂಡಿಲ್ಲವೆಂಬ ಬಗ್ಗೆ ಘೋಷಣೆಯನ್ನು ಸಹ ಪಡೆದುಕೊಳ್ಳಬೇಕು ಎಂದರು.
ಕಲಂ 16 ಮತ್ತು 17ರಡಿ ನೇಮಕಗೊಂಡ ನಿರೀಕ್ಷಕರು ಪ್ರತಿ ತಿಂಗಳು ಬಾಲ್ಯಾ ಹಾಗೂ ಕಿಶೋರಾವಸ್ಥೆಯ ಕಾರ್ಮಿಕರ ತಪಾಸಣೆ ನಡೆಸಬೇಕು. ಬಾಲ್ಯಾ ಮತ್ತು ಕಿಶೋರಾವಸ್ಥೆಯ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳದಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ಹೇಳಿದರು.
ಕಾರ್ಮಿಕ ಅಧಿಕಾರಿ ಸಿ.ಎನ್.ಯಶೋಧರ ಮಾತನಾಡಿ, ಜೂನ್ 12ರಂದು ವಿಶ್ವ ಬಾಲಕಾರ್ಮಿಕ ವಿರೋಧಿ ದಿನ ಆಚರಣೆ ಅಂಗವಾಗಿ ಅಂದು ಬೆಳಿಗ್ಗೆ 8.30ಕ್ಕೆ ಚಿತ್ರದುರ್ಗ ನಗರದ ಹೊಳಲ್ಕೆರೆ ರಸ್ತೆಯ ಸಂಪಿಗೆ ಸಿದ್ದೇಶ್ವರ ಪ್ರೌಢಶಾಲೆಯ ಆವರಣದಲ್ಲಿ ಜಾಥಾ ಕಾರ್ಯಕ್ರಮ ಉದ್ಘಾಟನೆಯಾಗಲಿದೆ. ಚಿತ್ರದುರ್ಗ ನಗರದ ಹೊಳಲ್ಕೆರೆ ರಸ್ತೆಯ ಸಂಪಿಗೆ ಸಿದ್ದೇಶ್ವರ ಪ್ರೌಢಶಾಲಾ ಆವರಣದಿಂದ ಗಾಂಧಿ ವೃತ್ತ, ಬಿ.ಡಿ. ರಸ್ತೆಯ ಮೂಲಕ ಸಭಾ ಕಾರ್ಯಕ್ರಮ ನಡೆಯುವ ತರಾಸು ರಂಗಮಂದಿರದಲ್ಲಿ ಜಾಥಾ ಕೊನೆಗೊಳ್ಳಲಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಂಗವಾಗಿ ಶಾಲಾ ಕಾಲೇಜುಗಲ್ಲಿ ಚಿತ್ರಕಲಾ ಸ್ಪರ್ಧೆ, ಪ್ರಬಂಧ ಸ್ಪರ್ಧೆ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ, ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದವರಿಗೆ ನಗದು ಬಹುಮಾನ ಮತ್ತು ಪ್ರಮಾಣ ಪತ್ರ ನೀಡಲು ಕ್ರಮವಹಿಸಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು.
ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಣೆ ಕಾರ್ಯಕ್ರಮಕ್ಕೆ ಕೇವಲ ವಿದ್ಯಾರ್ಥಿಗಳು ಮಾತ್ರವಲ್ಲದೇ ಕಟ್ಟಡ ಕಾರ್ಮಿಕರು ಸಂಘದ ಪದಾಧಿಕಾರಿಗಳು, ಹೋಟೆಲ್ ಮಾಲೀಕರ ಸಂಘ, ಗ್ಯಾರೇಜ್ ಯೂನಿಯನ್ ಪದಾಧಿಕಾರಿಗಳು  ಕಾರ್ಯಕ್ರಮಕ್ಕೆ ಹಾಜರಾಗಬೇಕು. ಈ ಕಾರ್ಯಕ್ರಮದ ಮೂಲಕ ಅವರಿಗೆ ಜಾಗೃತಿ ಮೂಡಿಸುವ ಮೂಲಕ ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಹಕಾರವಾಗಲಿದೆ ಎಂದು ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ಪಿ.ಸತೀಶ್ ಕುಮಾರ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ರವಿಶಂಕರ್ ರೆಡ್ಡಿ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್.ರಾಜು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ರೇಖಾ,  ಕಾರ್ಮಿಕ ಇಲಾಖೆಯ ಕಾರ್ಮಿಕ ನಿರೀಕ್ಷಕರಾದ ಡಿ.ರಾಜಣ್ಣ, ಟಿ. ಕುಸುಮ, ಅಲ್ಲಾಭಕ್ಷಿ, ಗಿರಿತಿಮ್ಮಕ್ಕ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
ಫೋಟೋ ವಿವರ: ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅಧ್ಯಕ್ಷತೆಯಲ್ಲಿ ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನ ಆಚರಣೆ ಕುರಿತು ಸಭೆ ಜರುಗಿತು.

[t4b-ticker]

You May Also Like

More From Author

+ There are no comments

Add yours