ಬೆಂಗಳೂರು: ಧಾರವಾಡದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಯೋಗೇಶ್ ಗೌಡ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಹಾಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 17 ಮಂದಿ ಅಪರಾಧಿಗಳಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶುಕ್ರವಾರ ಮಹತ್ವದ ಶಿಕ್ಷೆಯನ್ನು ಪ್ರಕಟಿಸಿದೆ.
ಬುಧವಾರವಷ್ಟೇ ವಿನಯ್ ಕುಲಕರ್ಣಿ ಸೇರಿದಂತೆ 17 ಮಂದಿಯನ್ನು ನ್ಯಾಯಾಲಯ ಅಪರಾಧಿಗಳು ಎಂದು ಘೋಷಿಸಿತ್ತು. ಗುರುವಾರ ಶಿಕ್ಷೆಯ ಪ್ರಮಾಣದ ಬಗ್ಗೆ ಸುದೀರ್ಘ ವಾದ-ಪ್ರತಿವಾದ ಆಲಿಸಿದ್ದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಇಂದು ಜೀವಾವಧಿ ಶಿಕ್ಷೆ ಆದೇಶ ನೀಡಿದ್ದಾರೆ.
ಶಾಸಕ ಸ್ಥಾನಕ್ಕೆ ಕುತ್ತು
ಜನಪ್ರತಿನಿಧಿಗಳ ಕಾಯ್ದೆಯ ಅನ್ವಯ, ಯಾವುದೇ ಹಾಲಿ ಶಾಸಕ ಅಥವಾ ಸಂಸದನಿಗೆ 2 ವರ್ಷ ಅಥವಾ ಅದಕ್ಕಿಂತ ಹೆಚ್ಚು ಅವಧಿಯ ಜೈಲು ಶಿಕ್ಷೆಯಾದರೆ, ಅವರು ತಕ್ಷಣವೇ ತಮ್ಮ ಸ್ಥಾನವನ್ನು ಕಳೆದುಕೊಳ್ಳುತ್ತಾರೆ. ಇದೀಗ ವಿನಯ್ ಕುಲಕರ್ಣಿಗೆ ಶಿಕ್ಷೆ ಪ್ರಕಟವಾಗಿರುವುದರಿಂದ, ಅವರು ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನದಿಂದ ಅನರ್ಹಗೊಳ್ಳುವುದು ಖಚಿತವಾಗಿದೆ. ಕರ್ನಾಟಕ ರಾಜಕೀಯ ವಲಯದಲ್ಲಿ ಈ ತೀರ್ಪು ಭಾರೀ ಸಂಚಲನ ಮೂಡಿಸಿದ್ದು, ಧಾರವಾಡದಲ್ಲಿ ಶೀಘ್ರದಲ್ಲೇ ಉಪಚುನಾವಣೆ ನಡೆಯುವ ಸಾಧ್ಯತೆ ದಟ್ಟವಾಗಿದೆ.





