ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗ ನಗರಸಭೆ ಪೌರಾಯುಕ್ತೆಗೆ ಅವಾಚ್ಯ ಶಬ್ದಗಳಿಂದ ಮತ್ತು ಅಶ್ಲೀಲ ಪದಗಳನ್ನು ಬಳಸಿ ನಿಂದಿಸಿರುವ ಪ್ರಕರಣದ ಬೆನ್ನಲ್ಲೇ ಸಿಎಂ ತವರಿನಲ್ಲೂ ಇಂತದ್ದೇ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಮೈಸೂರಿನ ಮಹಿಳಾ ಅಧಿಕಾರಿಗೆ ವ್ಯಕ್ತಿಯೋರ್ವ ಅವಾಚ್ಯ ಶಬ್ಧಗಳಿಂದ ನಿಂದಿಸಿರುವುದು ಬೆಳಕಿಗೆ ಬಂದಿದೆ.
ಜಮೀನು ಪರಿಶೀಲನೆಗೆ ತೆರಳಿದ ಅಧಿಕಾರಿಗಳಿಗೆ ನಿಂದನೆ
ಗುಡಮಾದನಹಳ್ಳಿಯಲ್ಲಿ ನಿಮ್ಹಾನ್ಸ್ ಮಾದರಿಯ ಹೊಸ ಸರ್ಕಾರಿ ಆಸ್ಪತ್ರೆ ನಿರ್ಮಾಣಕ್ಕೆ ಸರ್ವೆ ನಂ. 8ರಲ್ಲಿ 5 ಎಕರೆ 5 ಗುಂಟೆ, ಸರ್ವೆ ನಂ. 60ರಲ್ಲಿ 6 ಎಕರೆ 10 ಗುಂಟೆ ಹಾಗೂ ಸರ್ವೆ ನಂ. 68ರಲ್ಲಿ 8 ಎಕರೆ 25 ಗುಂಟೆ ಸೇರಿ ಒಟ್ಟು 20 ಎಕರೆ ಭೂಮಿಯನ್ನು ಆಸ್ಪತ್ರೆಗಾಗಿ ಮೀಸಲಿಡಲಾಗಿದೆ. ಸಿಎಂ ಸಿದ್ದರಾಮಯ್ಯ ಕನಸಿನ ಯೋಜನೆಯಾಗಿರುವ ಆಸ್ಪತ್ರೆಯ ಜಾಗ ಗುರುತಿಸುವ ಮತ್ತು ಸ್ವಾಧೀನ ಪ್ರಕ್ರಿಯೆಯ ಹಿನ್ನೆಲೆಯಲ್ಲಿ, ಬಂಡೀಪಾಳ್ಯ ವೃತ್ತದ ಗ್ರಾಮ ಆಡಳಿತಾಧಿಕಾರಿ ಜಿ. ಭವ್ಯಾ ಮತ್ತು ಗ್ರಾಮ ಸಹಾಯಕ ನವೀನ್ ಕುಮಾರ್ ಸೇರಿ ಜಮೀನು ಪರಿಶೀಲನೆಗೆ ತೆರಳಿದ್ದರು.
ನಿಂದನೆಯ ದೃಶ್ಯ ಮೊಬೈಲ್ನಲ್ಲಿ ಸೆರೆ
ಪರಿಶೀಲನೆ ವೇಳೆ ಅನಧಿಕೃತವಾಗಿ ಅಡಕೆ ತೋಟ ನಿರ್ಮಿಸಿಕೊಂಡಿದ್ದ ಜಿ.ಎಂ. ಪುಟ್ಟಸ್ವಾಮಿ ಅಧಿಕಾರಿಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಯಾರನ್ನು ಕೇಳಿ ನಿಮ್ಹಾನ್ಸ್ ಆಸ್ಪತ್ರೆಗೆ ಜಮೀನು ಮಂಜೂರು ಮಾಡಿದ್ದೀರಿ? ಮೊದಲು ತಹಶೀಲ್ದಾರ್ ತಲೆ ತೆಗೆಯಬೇಕು ಎಂದು ಧಮ್ಕಿ ಹಾಕಿರುವ ದೃಶ್ಯಗಳನ್ನು ಮೊಬೈಲ್ನಲ್ಲಿ ಸೆರೆಹಿಡಿಯಲಾಗಿದೆ. ಬಳಿಕ ಪುಟ್ಟಸ್ವಾಮಿ ಮೊಬೈಲ್ ಕಿತ್ತುಕೊಂಡು ವಿಡಿಯೋ ಡಿಲೀಟ್ ಮಾಡಲು ಯತ್ನಿಸಿದ್ದಾನೆ ಎನ್ನಲಾಗಿದೆ.






