ಕ್ಯಾನ್ಸರ್ ತಪಾಸಣಾ ಶಿಬಿರದ ಸದುಪಯೋಗಪಡೆದುಕೊಳ್ಳಲು ಸಲಹೆ: ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ

 

 

 

 

ಚಿತ್ರದುರ್ಗ,ಫೆಬ್ರವರಿ04:
ವಿಶ್ವ ಕ್ಯಾನ್ಸರ್ ಜಾಗೃತಿ ದಿನದ ಅಂಗವಾಗಿ ಕ್ಯಾನ್ಸರ್ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದ್ದು, ಕ್ಯಾನ್ಸರ್ ಪೀಡಿತ ರೋಗಿಗಳು ತಪಾಸಣಾ ಶಿಬಿರದ ಸದುಪಯೋಗ ಪಡೆದು ಉತ್ತಮ ಆರೋಗ್ಯ ಕಾಪಾಡಿಕೊಂಡು ನಿಮ್ಮಗಳ ಜೀವನಶೈಲಿ ಬದಲಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಸಲಹೆ ನೀಡಿದರು.
ನಗರದ ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ  ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಎನ್‍ಸಿಡಿ ಕೋಶ ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಕ್ಯಾನ್ಸರ್ ಜಾಗೃತಿ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಕ್ಯಾನ್ಸರ್ ರೋಗಿಗಳಿಗೆ ಉಚಿತವಾಗಿ ತಪಾಸಣೆ ಮಾಡಲಾಗುತ್ತಿದ್ದು, ಮಹಿಳೆಯರಿಗೆ ವಿಶೇಷವಾಗಿ ಮ್ಯಾಮೋಗ್ರಾಫಿ ಮಾಡಲಾಗುತ್ತಿದೆ. ಕ್ಯಾನ್ಸರ್‍ಗೆ ತುತ್ತಾದ ಎಲ್ಲ ರೋಗಿಗಳು ತಪಸಣಾ ಶಿಬಿರದಲ್ಲಿ ಹೆಸರುಗಳನ್ನು ನೋಂದಾಯಿಸಿಕೊಳ್ಳಬೇಕು ಎಂದು ಹೇಳಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್. ರಂಗನಾಥ್ ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವೂ ವಿಶ್ವ ಕ್ಯಾನ್ಸರ್ ಜಾಗೃತಿ ಸಪ್ತಾಹವನ್ನು ಆಚರಿಸಲಾಗುತ್ತಿದ್ದು, “ಆರೈಕೆಯ ಅಂತರವನ್ನು ಕಡಿತಗೊಳಿಸಿ” ಎಂಬ ಘೋಷ ವಾಕ್ಯದೊಂದಿಗೆ ಜಿಲ್ಲೆಯಾದ್ಯಂತ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದರು.
ವಿಶ್ವ ಕ್ಯಾನ್ಸರ್ ವಿರೋಧಿ ದಿನವಾಗಿ ಜಿಲ್ಲಾ, ತಾಲ್ಲೂಕು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಮಟ್ಟದಲ್ಲಿಯೂ ಪ್ರತಿವರ್ಷ ನಾವು ಕ್ಯಾನ್ಸರ್ ಶಿಬಿರಗಳನ್ನು ಹಮ್ಮಿಕೊಂಡು ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಕ್ಯಾನ್ಸರ್ ಬಗ್ಗೆ ಇರುವ ತಪ್ಪು ಕಲ್ಪನೆಗಳ ಬಗ್ಗೆ ಜನ ಜಾಗೃತಿ ಮೂಡಿಸುವುದರ ಜೊತೆಗೆ ರೋಗವನ್ನು ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ನೀಡುತ್ತೇವೆ. ಈ ಸಂಬಂಧ ಕ್ಯಾನ್ಸರ್ ರೋಗಿಗಳಿಗೆ ಈ ಶಿಬಿರದಲ್ಲಿ ನೋಂದಣಿ ಮಾಡಿಕೊಂಡು ಚಿಕಿತ್ಸೆಗಾಗಿ ಕಿದ್ವಾಯಿ ಆಸ್ಪತ್ರೆಗೆ ತೆರಳಬೇಕಾಗುತ್ತದೆ ಎಂದರು.
ಚಿತ್ರದುರ್ಗ ಜಿಲ್ಲೆಯ ಜನರಿಗೆ ಅನುಕೂಲವಾಗಲೆಂದು ಜಿಲ್ಲೆಯಲ್ಲಿಯೇ ಕ್ಯಾನ್ಸರ್ ಸೆಂಟರ್ ಮಾಡಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದ ಮೇರೆಗೆ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ವಿಶ್ವ ಕ್ಯಾನ್ಸರ್ ಜಾಗೃತಿ ದಿನಾಚರಣೆ ಅಂಗವಾಗಿ 30 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ಸಾರ್ವಜನಿಕರಿಗೂ ಬಾಯಿ ಕ್ಯಾನ್ಸರ್ ಹಾಗೂ ಸ್ತನ ಕ್ಯಾನ್ಸರ್,  ಗರ್ಭಕಂಠ ಕ್ಯಾನ್ಸರ್ ತಪಾಸಣಾ ಶಿಬಿರ ನಡೆಸಲಾಯಿತು.
ಬಸವೇಶ್ವರ ವೈದ್ಯಕೀಯ ಕಾಲೇಜಿನ ಅಧೀಕ್ಷಕ ಡಾ.ಫಾಲಾಕ್ಷಪ್ಪ ಮಾತನಾಡಿ, ಸಾರ್ವಜನಿಕರು ತಪಾಸಣೆ ಶಿಬಿರದಲ್ಲಿ ನೊಂದಣಿ ಮಾಡಿಕೊಂಡು ತಪಾಸಣೆಗೆ ಸಹಕರಿಸಬೇಕು. ವಿಶೇಷ ತಜ್ಞರ ತಂಡದಿಂದ ತಪಾಸಣೆ ನಡೆಸಲಾಗುತ್ತಿದೆ. ಕ್ಯಾನ್ಸರ್ ಚಿಕಿತ್ಸೆಗೆ ಸರ್ಕಾರದ ಯೋಜನೆಗಳನ್ನು ತೊಡಗಿಸಿ ಚಿಕಿತ್ಸೆಗೆ ಕ್ರಮವಹಿಸಲಾಗುವುದು. ಕಾಯಿಲೆ ಗಂಭೀರ ಸ್ವರೂಪಕ್ಕೆ ತಿರುಗುವ ಪೂರ್ವದಲ್ಲಿಯೇ ತಪಾಸಣೆ ಮಾಡಿಸಿಕೊಂಡರೆ ಚಿಕಿತ್ಸೆ ನೀಡುವುದು ಸುಲಭವಾಗಲಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕಾಶಿ, ಜಿಲ್ಲಾ ಕುಟಂಬ ಕಲ್ಯಾಣಾಧಿಕಾರಿ ಡಾ.ರೇಣುಪ್ರಸಾದ್, ಹಿರಿಯ ವೈದ್ಯಾಧಿಕಾರಿ ಡಾ.ಜಯಮ್ಮ, ವೈದ್ಯಾಧಿಕಾರಿಗಳಾದ ಡಾ.ಶ್ವೇತಾ, ಡಾ.ರುದ್ರೇಶ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣನಾಯ್ಕ್, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್ ಸೇರಿದಂತೆ ಮತ್ತಿತರರು ಇದ್ದರು.
ಫೋಟೋ ವಿವರ: ಚಿತ್ರದುರ್ಗದ ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ  ಶುಕ್ರವಾರ ಹಮ್ಮಿಕೊಂಡಿದ್ದ ವಿಶ್ವ ಕ್ಯಾನ್ಸರ್ ಜಾಗೃತಿ ದಿನದ ಅಂಗವಾಗಿ ಜಾಗೃತಿ ಕರಪತ್ರಗಳನ್ನು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಬಿಡುಗಡೆಗೊಳಿಸಿದರು.

 

 

[t4b-ticker]

You May Also Like

More From Author

+ There are no comments

Add yours