ಬೆಂಗಳೂರು, ಏ. ೨೯- ಪೊಲೀಸ್ ಸಬ್ಇನ್ಸ್ಪೆಕ್ಟರ್ ನೇಮಕಾತಿಗಳಲ್ಲಿ ಅಕ್ರಮ ನಡೆದಿರುವ ಹಿನ್ನೆಲೆಯಲ್ಲಿ ಪಿಎಸ್ಐ ಹುದ್ದೆಗಳಿಗೆ ಹೊಸದಾಗಿ ಪರೀಕ್ಷೆ ನಡೆಸುವ ಮಹತ್ವದ ತೀರ್ಮಾನವನ್ನು ರಾಜ್ಯ ಸರ್ಕಾರ ಕೈಗೊಂಡಿದೆ.ಮರು ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ಈ ತೀರ್ಮಾನದಿಂದ ಈ ಹಿಂದೆ ಪೊಲೀಸ್ ಸಬ್ಇನ್ಸ್ಪೆಕ್ಟರ್ ಹುದ್ದೆಗಳಿಗೆ ಆಯ್ಕೆಯಾಗಿದ್ದ ೫೪೫ ನೇಮಕಾತಿಗಳು ಸಂಪೂರ್ಣ ರದ್ದಾಗಿವೆ.ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಪಿಎಸ್ಐ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಕಟಿಸಿದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು, ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರ ಜತೆ ಚರ್ಚಿಸಿಯೇ ಪಿಎಸ್ಐ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸುವ ತೀರ್ಮಾನ ಮಾಡಲಾಗಿದೆ. ಆದಷ್ಟು ಬೇಗ ಮರು ಪರೀಕ್ಷೆ ದಿನಾಂಕವನ್ನು ಪ್ರಕಟಿಸಲಾಗುವುದು ಎಂದರು.ಈ ಹಿಂದೆ ಪಿಎಸ್ಐ ಪರೀಕ್ಷೆ ಬರೆದಿದ್ದ ೫೪,೨೮೯ ಅಭ್ಯರ್ಥಿಗಳಿಗೆ ಮಾತ್ರ ಮರು ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುವುದು. ನೇಮಕಾತಿ ಅಕ್ರಮದಲ್ಲಿ ಸಿಲುಕಿಕೊಂಡಿರುವ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.
+ There are no comments
Add yours